Rain Alert : ರಾಜ್ಯದಲ್ಲಿ ಇಂದು, ನಾಳೆ `ಆಲಿಕಲ್ಲು ಮಳೆ’ : ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದ ಜನತೆಗೆ ಒಂದೆಡೆ ಮಳೆಯ ಸಿಹಿ ಸುದ್ದಿ ಸಿಕ್ಕರೆ, ಮತ್ತೊಂದೆಡೆ ಬಿಸಿಲ ಬೇಗೆಯ ಎಚ್ಚರಿಕೆ ಲಭಿಸಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯ ಆತಂಕದ ನಡುವೆಯೂ, ಇಂದು ಮತ್ತು ನಾಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಅಥವಾ ಮಧ್ಯಮ ಪ್ರಮಾಣದ ಮಳೆಯಾಗಲಿದೆ.ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಮಳೆ ಸುರಿಯುವ ನಿರೀಕ್ಷೆಯಿದೆ.
ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಒಣ ಹವೆ ಹಾಗೂ ತಾಪಮಾನ ಏರಿಕೆ ಎಚ್ಚರಿಕೆ
ಒಂದೆಡೆ ಮಳೆಯ ಸಿಂಚನವಾದರೆ, ಇನ್ನೊಂದೆಡೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಲಿದೆ.ಬಾಗಲಕೋಟೆ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ತೀರಾ ಕಡಿಮೆ ಇದ್ದು, ಒಣ ಹವೆ ಮುಂದುವರಿಯಲಿದೆ. ಮುಂದಿನ ಐದು ದಿನಗಳ ಕಾಲ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಜನರಿಗೆ ಎಚ್ಚರಿಕೆ ನೀಡಿದೆ.
ಹಲವೆಡೆ ಗುಡುಗು, ಮಿಂಚು ಹಾಗೂ ಭಾರಿ ಗಾಳಿಯೊಂದಿಗೆ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

